ನಾಳೆ ವಯನಾಡಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ
ವಯನಾಡ್: ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, 66 ಮಂದಿ ಮೃತಪಟ್ಟಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಲೆ ಇದೆ.ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಭೂಕುಸಿತ ಸಂಭವಿಸಿದ ವಯನಾಡಿಗೆ ನಾಳೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರೀ ಭೂಕುಸಿತದಿಂದ ತೀವ್ರ ಹಾನಿಗೊಳಗಾಗಿರುವ ವಯನಾಡಿನಲ್ಲಿ ರಕ್ಷಣಾ ಕಾರ್ಯಾಚರಣೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ವಿರೋಧ ಪಕ್ಷದ ನಾಯಕ ಮತ್ತು ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ ಅವರು ದೂರವಾಣಿ ಮೂಲಕ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಕೇರಳದ ವಯನಾಡ್ನಲ್ಲಿ ಭಾರೀ ಭೂಕುಸಿತ ಸಂಭವಿಸಿದ ನಂತರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ ಅವರು, “ವಯನಾಡಿನ ಮೆಪ್ಪಾಡಿ ಬಳಿ ಸಂಭವಿಸಿದ ಭಾರೀ ಭೂಕುಸಿತದಿಂದ ನಾನು ತೀವ್ರವಾಗಿ ನೊಂದಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ಇನ್ನೂ ಸಿಕ್ಕಿಬಿದ್ದವರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಕರೆತರಲಾಗುವುದು ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
“ಕೇರಳ ಮುಖ್ಯಮಂತ್ರಿ ಮತ್ತು ವಯನಾಡ್ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ.