ವಿನೇಶ್ ಫೋಗಟ್, ಬಜರಂಗ್ ಪುನಿಯಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ರೈಲ್ವೆ ಇಲಾಖೆಯ ತಮ್ಮ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅದಾದ ಬಳಿಕ ದೆಹಲಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಮುನ್ನ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಇತ್ತಿಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಭೇಟಿ ಮಾಡಿ, ಮಾತುಕತೆ ನಡೆಸಿದ್ದ ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್ನಿಂದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಚರ್ಚೆಗಳು ಹರಿದಾಡಿದ್ದವು. ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್ ಸೇರುವ ಬಗ್ಗೆ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಇಂದು ಮಧ್ಯಾಹ್ನ ಸ್ಟಾರ್ ಕುಸ್ತಿಪಟುಗಳಾದ ವಿನೇಶ್ ಫೋಗಲ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ.
ಅಧಿಕೃತ ಸೇರ್ಪಡೆಗೂ ಮುನ್ನ ಅವರು ರಾಷ್ಟ್ರ ರಾಜಧಾನಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರನ್ನು ಭೇಟಿಯಾದರು. ಬಳಿಕ ನಡೆದ ಸರಳ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಬ್ಬರೂ ಕುಸ್ತಿಪಟುಗಳನ್ನು ಬರಮಾಡಿಕೊಳ್ಳಲಾಯಿತು.
ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರನ್ನು ಹೊರತುಪಡಿಸಿ ಬಜರಂಗ್ ಪುನಿಯಾ ಅವರಿಗೆ ಟಿಕೆಟ್ ನೀಡದಿದ್ದರೆ ಅವರಿಗೆ ಕಾಂಗ್ರೆಸ್ ಸಂಘಟನೆಯಲ್ಲಿ ಸೂಕ್ತ ಹುದ್ದೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ. ಮುಂದಿನ ತಿಂಗಳು ಹರಿಯಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.