ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್ ಕುಮಾರಸ್ವಾಮಿ ಎನ್ ಡಿಎ ಅಭ್ಯರ್ಥಿ – ಬಿಎಸ್ ವೈ, ಎಚ್ ಡಿಕೆ ಘೋಷಣೆ
ಬೆಂಗಳೂರು: ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಕೊನೆಗೂ ಗುರುವಾರ ಘೋಷಣೆಯಾಗಿದೆ. ಅಳೆದು ತೂಗಿ ಕೊನೆ ಕ್ಷಣದಲ್ಲಿ ಚನ್ನಪಟ್ಟಣದಿಂದ ಎನ್ ಡಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿಂದು ನಡೆದ ಜೆಡಿಎಸ್-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.
ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿತ್ತು. ಬಳಿಕ ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿ ನಂತರ ನಿಖಿಲ್ ಕುಮಾರಸ್ವಾಮಿ ಎನ್ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು.
ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಎನ್ ಡಿ ಎ ಅಭ್ಯರ್ಥಿಯನ್ನಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಂಬಲ ಹಾಗೂ ಆಶೀರ್ವಾದವೂ ಇದೆ. ಇಲ್ಲಿ ಸ್ಪರ್ಧೆ ಅಷ್ಟೇ ಅಲ್ಲ, ನೂರಕ್ಕೂ ನೂರು ಗೆಲ್ಲುತ್ತೇವೆ. ನಮಗೆ ಸಂಪೂರ್ಣ ವಿಶ್ವಾಸ ಇದೆ. ಜೆಡಿಎಸ್ ಬಿಜೆಪಿ ನಾಯಕರು ಪ್ತವಾಸ ಮಾಡ್ತೇವೆ. ಪಕ್ಷಾಂತರ ಮಾಡಿದವರ ಬಗ್ಗೆ ಮಾತಾಡಲ್ಲ. ಅನಾವಶ್ಯಕ ವಿಚಾರ ಚರ್ಚೆ ಮಾಡಲ್ಲ. ಎಲ್ಲ ಆಯಾಮಗಳಲ್ಲಿಯೂ ಚರ್ಚೆ ಮಾಡಿ ತಿರ್ಮಾನ ಮಾಡಿದ್ದೇವೆ ಎಂದು ಹೇಳಿದರು.