ಜಿಲ್ಲಾ ಉಸ್ತುವಾರಿ ಸ್ಥಾನ ಅಗತ್ಯ : ಮಾಜಿ ಶಾಸಕ ಆರ್. ನರೇಂದ್ರ
ಶಾರುಕ್ ಖಾನ್ ಹನೂರು
ಹನೂರು : ಸಮಾಜದ ಏಕೈಕ ಶಾಸಕರಾಗಿರುವ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರ ಜಿಲ್ಲೆಯ ಹಿರಿಯ ಶಾಸಕರು ಇವರಿಗೆ ಮುಂದಿನ ದಿನಗಳಲ್ಲಾದರೂ ಜಿಲ್ಲಾ ಉಸ್ತುವಾರಿ ಸ್ಥಾನ ನೀಡುವಂತಾಗಲಿ ಎಂದು ಮಾಜಿ ಶಾಸಕ ಆರ್.ನರೇಂದ್ರ ಒತ್ತಾಯಿಸಿದರು.
ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ನಡೆದ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 135 ಶಾಸಕರು ಆಯ್ಕೆಯಾಗುವ ಮೂಲಕ ಸ್ಪಷ್ಟ ಬಹುಮತ ಬಂದಿದ್ದು ಸರ್ಕಾರ ರಚನೆ ಮಾಡಿ ಅಧಿಕಾರ ನಡೆಸುತ್ತಿದೆ. ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಗೂ ಪ್ರಾತಿನಿಧ್ಯ ನೀಡಿದ್ದರೆ ಹೆಚ್ಚಿನ ಅಭಿವೃದ್ಧಿ ಆಗುತ್ತಿತ್ತು, ಆದರೆ ಕಾರಣಾಂತರಗಳಿಂದ ಪ್ರಾತಿನಿಧ್ಯ ನೀಡದೆ ಇರುವುದು ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾದಂತಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಉಸ್ತುವಾರಿ ಸಚಿವರಾಗಿದ್ದ ಪುಟ್ಟರಂಗಶೆಟ್ಟಿ ಅವರು ಸದಾ ಅಭಿವೃದ್ಧಿಗೆ ಚಿಂತನೆ ನಡೆಸಿದ್ದರು ಜಿಲ್ಲೆಯ ಎಲ್ಲಾ ಶಾಸಕರನ್ನು ಪಕ್ಷ ಬೇದ ಮಾಡದೆ ಸಮನಾಗಿ ಕಾಣುತ್ತಿದ್ದರು. ಹೀಗಾಗಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಚಾಮರಾಜನಗರ ಜಿಲ್ಲೆಯನ್ನು ಪರಿಗಣಿಸಿ ಶಾಸಕ ಪುಟ್ಟರಂಗಶೆಟ್ಟಿ ಅವರನ್ನು ಸಚಿವರನ್ನಾಗಿ ಮಾಡಿ ಜಿಲ್ಲಾ ಉಸ್ತುವಾರಿ ಮಾಡುವಂತೆ ಆಗಲಿ ಎಂದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಗಿರೀಶ್, ರಾಮಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮುಖಂಡರಾದ ಎಲ್ ನಾಗೇಂದ್ರ, ಕಾಮರಾಜು, ಸೋಮಶೇಖರ್, ಶಾಗ್ಯ ಬಸವರಾಜು ಹಾಜರಿದ್ದರು.