ದರ್ಶನ್ ಗೆ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಮಂಜೂರು! ಷರತ್ತು ಅನ್ವಯ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ತೂಗುದೀಪಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಹೈಕೋರ್ಟ್ ಆರು ವಾರಗಳ ಅವಧಿ ಅಂದರೆ 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆ ಮೂಲಕ ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಷರತ್ತುಗಳು ಅನ್ವಯ
ಇನ್ನು ನಟ ದರ್ಶನ್ ಗೆ ನೀಡಲಾಗಿರುವ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ಸಾಕಷ್ಟು ಷರತ್ತುಗಳನ್ನು ವಿಧಿಸಿದೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ.
ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ಜಾಮೀನು ಪಡೆದ ಬಳಿಕ ಒಂದು ವಾರದಲ್ಲಿ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ನೀಡಬೇಕು ಎಂದು ಹೇಳಿದೆ.
ಅಲ್ಲದೆ ದರ್ಶನ್ ಪಾಸ್ಪೋರ್ಟ್ ಅನ್ನು ಕೋರ್ಟ್ ಸುಪರ್ಧಿಗೆ ನೀಡಬೇಕು ಎಂದು ಹೇಳಿದ್ದು, ಪ್ರತೀವಾರವೂ ಚಿಕಿತ್ಸಾ ವಿವರ ನೀಡಬೇಕು ಎಂದು ಹೇಳಿದೆ.
ಬೆನ್ನು ಹುರಿ ಸಮಸ್ಯೆಗೆ ದರ್ಶನ್ ಗೆ ಚಿಕಿತ್ಸೆ
ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್ನಲ್ಲಿ ಅರ್ಜಿ ಹಾಕಿದ್ದರು. ಆದರೆ ಹೈಕೋರ್ಟ್ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು. ದರ್ಶನ್ಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು, ದರ್ಶನ್ರ ಆರೋಗ್ಯ ಸಮಸ್ಯೆಯ ಕುರಿತು ವರದಿ ನೀಡಲು ಮೆಡಿಕಲ್ ಬೋರ್ಡ್ ಸ್ಥಾಪನೆ ಮಾಡಬೇಕೆಂಬ ವಾದವನ್ನು ನ್ಯಾಯಾಲಯದ ಮುಂದೆ ಮಂಡಿಸಿದ್ದರು. ಅಲ್ಲದೆ ಈಗ ಸಲ್ಲಿಸಲಾಗಿರುವ ವೈದ್ಯ ವರದಿಯಲ್ಲಿ ದರ್ಶನ್ಗೆ ಆಗಬೇಕಿರುವ ಶಸ್ತ್ರಚಿಕಿತ್ಸೆ, ಗುಣವಾಗಲು ತೆಗೆದುಕೊಳ್ಳುವ ಸಮಯ ನಿಖರವಾಗಿಲ್ಲವೆಂದು ವಾದಿಸಿದ್ದರು.