ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ
ನವದೆಹಲಿ: ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ಮೂಲಕ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು.
ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿದ್ದ ಸಿಂಗ್, 1991ರ ಅಕ್ಟೋಬರ್‍ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು. ಅವರು 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು. ಅವರು ಆಗ ಮಾಡಿದ ಆರ್ಥಿಕ ಸುಧಾರಣೆಗಳಿಗೆ ಈಗಲೂ ವಿಶ್ವದ ಮನ್ನಣೆ ಇದೆ. ಜನಪ್ರಿಯದೃಷ್ಟಿಕೋನದಿಂದ ನೋಡುವುದಾದರೆ ಭಾರತದ ಅಂದಿನ ದಿನಗಳು ಡಾ. ಸಿಂಗ್ ಅವರ ವ್ಯಕ್ತಿತ್ವವನ್ನು ಬಿಂಬಿಸುತ್ತವೆ. ಡಾ. ಸಿಂಗ್ ಅವರು ಸಾಮಾಜಿಕ ಕ್ಷೇತ್ರದ ತಮ್ಮ ಅದ್ವಿತೀಯ ಸಾಧನೆಗಾಗಿ ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.